ನಮ್ಮ ಸುತ್ತಲಿನ ಸತ್ಯವನ್ನು ದೂರಿಕರಿಸಿ
ದೂರದ ಅವಾಸ್ತವವನ್ನು ನಂಬುವ ವರ್ತಮಾನದ ಯುವ ಜನಾಂಗ, ಕಾರ್ಪೊರೇಟ್ ವಲಯದ ಬಳಸಿ ಬಿಸಾಡುವ ಸಿದ್ಧಾಂತಕ್ಕೆ
ಮರುಳಾಗಿದ್ದಾರೆ. ಅವಕಾಶಗಳ ಭ್ರಮೆಯನ್ನು ಹುಟ್ಟಿಸುವ ಈ ಬಿಕ್ಕಟ್ಟು, ಅದೇ ಕಾರ್ಪೊರೇಟ್ ವಲಯದಿಂದ,
ಮತ್ತೆ ಅದೇ ಸಿದ್ಧಾಂತದಿಂದ ಮೋಸಕ್ಕೆ ಹೋಗುವ ಸಾಧ್ಯತೆಗಳನ್ನು ಹೆಚ್ಚಿಸುತ್ತಿದೆ. ಓಡಿಹೋಗಲಾಗದ, ನಿಂತು
ಬದುಕಲಾಗದ ಆದರೆ ನಿರಂತರ ಹುಚ್ಚು ಹುಡುಕಾಟಕ್ಕೆ ಹಚ್ಚುವ ಈ ಹವ್ಯಾಸ, ಎಲೆಕ್ಟ್ರಾನಿಕ್ ಮಾದ್ಯಮಗಳನ್ನು
ನಂಬಿಕೊಂಡಿರುವವರಿಗೆ ಹುಡುಗಾಟವೆನ್ನಿಸಿದೆ. ಕಣ್ಣು ಕೋರೈಸುವ ಟ್ಯಾಬ್, ಮೋಬೈಲ್, ಕಂಪ್ಯೂಟರ್‍ಗಳು
ಕಣ್ಣೀರೊರೆಸುವುದಿಲ್ಲ. ಫ್ಯಾಶನ್‍ನನ್ನು ಕುರಿತು ಮಾತಾಡುವ ಈ ಲೋಕ ಪ್ಯಾಶೆನ್ ಕುರಿತು ಮನುಷ್ಯನನ್ನು
ಕೇಂದ್ರಿಕರಿಸುವುದಿಲ್ಲ. ಸಹನೆಯಂತೂ ಸತ್ತುಹೋದ ವಿಚಾರ. ಸಾಮಾಜಿಕ ತಾಣಗಳೆಂದು ಗುರುತಿಸಲ್ಪಡುವ ಈ
ಅಂತರ್‍ಜಾಲ ತಾಣಗಳು ನಿಜವಾದ ಸಾಮಾಜಿಕತೆಯ ಮನುಷ್ಯ ಸೌಂದರ್ಯವನ್ನು ಕೊಂದು ಇರುವ ಮನೆಯಲ್ಲಿಯೇ ಒಬ್ಬ
ಇನ್ನೊಬ್ಬನೊಂದಿಗೆ ಮಾತನಾಡದಂತೆ ಮಾಡಿ ಆತನನ್ನು ಭ್ರಮೆಗಳಿಂದ ತುಂಬುತ್ತದೆ. ನಾವು ಹೇಗೆ ಕಾಣಿಸಿಕೊಳ್ಳಬೇಕು
ಎನ್ನುವುದನ್ನು ತಿಳಿಸುವ ಈ ಮಾರ್ಗ ನಾನು ಏನಾಗಬೇಕು ಎನ್ನುವುದಕ್ಕೆ ಕನ್ನಡಿ ಹಿಡಿಯುವುದಿಲ್ಲ. ಎಲೆಕ್ಟ್ರಾನಿಕ್
ಜಗತ್ತು ನಮ್ಮಲ್ಲಿ ಧೈರ್ಯವನ್ನು ಬೆಳೆಸಲಿಲ್ಲ, ಹೇಸಿ ಧೈರ್ಯವನ್ನ, ಭಂಡ ಧೈರ್ಯವನ್ನ ಬೆಳೆಸಿತು. ಆಳ
ಅಧ್ಯಯನದ ಅವಶ್ಯಕತೆಯನ್ನು ದೂರಿಕರಿಸಿ ಮುಂಜಾನೆ ಕುಡಿಯುವ ಚಹಾ ಕುರಿತಾದ ತಿಳುವಳಿಕೆಗೂ ತನ್ನನ್ನು
ಮೊರೆ ಹೋಗುವಂತೆ ಮಾಡಿತು. ದುಡ್ಡು, ಅವಕಾಶ ಎನ್ನುವ ಪದಗಳ ಬೆನ್ನು ಹತ್ತಿ ಆತ್ಮವನ್ನು ಧಿಕ್ಕರಿಸಿ
ಅನ್ಯರ ಭಾವನೆಗಳನ್ನು ಅವಹೇಳಿಸಿ ಓಡಿಹೋಗುವ ನಿರ್ಲಜ್ಜತೆಯನ್ನು ಬೆಳೆಸಿತು. ಮುಂದಿನ ಮರೀಚಿಕೆಯನ್ನು
ಮೆಚ್ಚಿಕೊಂಡವರು ಹಿಂದಣ ಅನಂತವನ್ನು ಅಸಹ್ಯಗೊಳಿಸುವ ಆತ್ಮ ಭ್ರಷ್ಟತೆಯನ್ನು ಬೆಳೆಸಿತು. ಈ ರೀತಿ ಬುಡವಿಲ್ಲವಾಗಿರುವ
ಈ ನನ್ನ ಎಳೆಯ ಜಗತ್ತನ್ನು ನಾನು ವಾಟೆವರ್ ಜನರೇಶನ್ ಎನ್ನುತ್ತೇನೆ, ಎನ್ನುತ್ತಾರೆ ನನ್ನೊಂದಿಗಿದ್ದ
ಗೆಳೆಯ ನವೀನ್. ಇದೊಂದು ಶೇಮ್‍ಲೆಸ್ ಸೋಸಾಯಿಟಿ ಎನ್ನುತ್ತಾರೆ ಹಿರಿಯ ಚಿಂತಕಿ ಡಾ.ಇಂದಿರಾ. ಈ ಬಿಕ್ಕಟ್ಟೆ
ನಮ್ಮ ಮೂಲ. ಏಕೆಂದರೆ ವರ್ತಮಾನದ ಹೂಗಳನ್ನು ಧಿಕ್ಕರಿಸಿ ಭವಿಷ್ಯದ ಹಣ್ಣುಗಳ ಕನಸು ಕಾಣಲಾಗುವುದಿಲ್ಲ
ಹಾಗೆಯೇ ನಮ್ಮ ಮುಂದೆಯೇ ನಾಶವಾಗುವ ಯುವಜನಾಂಗವನ್ನು ನಿರ್ಲಕ್ಷಿಸಿ ಭವಿಷ್ಯದ ಭವ್ಯ ಭಾರತವನ್ನು ಕಲ್ಪಿಸಿಕೊಳ್ಳಲಾಗುವುದಿಲ್ಲ.